Tuesday, October 21, 2025

WEATHER | ಕರ್ನಾಟಕದಲ್ಲಿಂದು ಮಳೆಯ ಅಬ್ಬರ: 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಇಂದು ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಡೀ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯುವ ಸೂಚನೆ ಇದೆ. ಹವಾಮಾನ ಇಲಾಖೆಯು ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಭಾರೀ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಒಳನಾಡಿನ ಪ್ರಮುಖ ನಾಲ್ಕು ಜಿಲ್ಲೆಗಳಾದ ಶಿವಮೊಗ್ಗ, ತುಮಕೂರು, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದೆ.

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಇಡೀ ರಾಜ್ಯದಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ.

ಪ್ರದೇಶವಾರು ಮಳೆಯ ಮುನ್ಸೂಚನೆ
ಕರಾವಳಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಹವಾಮಾನ ವೈಪರೀತ್ಯದ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು: ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಮತ್ತು ಬೆಂಗಳೂರು ಗ್ರಾಮಾಂತರಗಳಲ್ಲಿಯೂ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ಉತ್ತರ ಒಳನಾಡು: ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದರೆ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.

ಬೆಂಗಳೂರಿನ ಹವಾಮಾನ
ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದ್ದು, ನಗರದಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!