March 15, 2026
Sunday, March 15, 2026
spot_img

ಒಂದು ವಾರದಲ್ಲಿ ರಸ್ತೆ ಗುಂಡಿ ಮುಚ್ಚಿ: ಸಿಎಂ ಸಿದ್ದರಾಮಯ್ಯ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದು ವಾರದಲ್ಲಿ ನಗರದ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಹೇಳಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲನ್ನು ಗೆಲ್ಲಲು ಬೆಂಗಳೂರಿನ‌ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ. ಬೆಂಗಳೂರಿನ ಮೆಟ್ರೋಗೆ ಶೇ.87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಾರೆ ಎಂದಿದ್ದಾರೆ.

ಹೊಸ ಹೊಸ ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ ಅವರಂಥ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !