ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕಾರ್ಯಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದರ ಬೆನ್ನಲ್ಲೇ, ರಾಜ್ಯ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಕಾರ್ಯಕ್ರಮ ಆಯೋಜನೆಗೆ ಪೂರ್ವಾನುಮತಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಸರ್ಕಾರದ ಈ ನಿರ್ಧಾರದಿಂದ ಪ್ರಿಯಾಂಕ್ ಖರ್ಗೆ ಅವರು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಸಚಿವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಚಿವರಿಗೆ ಭದ್ರತೆಯನ್ನು ಹೆಚ್ಚಿಸಿದೆ. ಗುಪ್ತಚರ ಇಲಾಖೆಯ ಮಾಹಿತಿಯ ಆಧಾರದ ಮೇಲೆ ಗೃಹ ಇಲಾಖೆಯು ಪ್ರಿಯಾಂಕ್ ಖರ್ಗೆ ಅವರಿಗೆ ಎಸ್ಕೋರ್ಟ್ ಭದ್ರತೆಯನ್ನು ಒದಗಿಸಿದೆ.

