ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯುವ ಸೂಚನೆ ಇದ್ದು, ನಾಳೆ ಬರೋಬ್ಬರಿ 28 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಗೆ ಸಾಕ್ಷಿಯಾಗಿದ್ದ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಕೊಂಚ ಇಳಿಕೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆ ಆಗಲಿದ್ದರೂ, ಭಾರಿ ಪ್ರಮಾಣದ ಗಾಳಿ ಮುಂದುವರಿಯಲಿದೆ. ಮುಂಜಾಗ್ರತಾ ಕ್ರಮವಾಗಿ, ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಈಗಾಗಲೇ 50ಕ್ಕೂ ಹೆಚ್ಚು ಮೀನುಗಾರಿಕೆ ಬೋಟ್‌ಗಳು ಬಂದರಿಗೆ ವಾಪಸಾಗಿದ್ದು, ಉಳಿದ ನೂರಾರು ಬೋಟ್‌ಗಳು ಬಂದರಿನಲ್ಲಿ ಲಂಗರು ಹಾಕಿವೆ. ವಾಯುಭಾರ ಕುಸಿತದಿಂದ ಈ ವರ್ಷ ತಡವಾಗಿ ಆರಂಭವಾಗಿದ್ದ ಮೀನುಗಾರಿಕೆ ಚಟುವಟಿಕೆಗಳಿಗೆ ಮತ್ತೊಮ್ಮೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ನೆರೆಯ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲೂ ಸಾಧಾರಣ ಮಳೆಯ ನಿರೀಕ್ಷೆ ಇದ್ದು, ಇಲ್ಲೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡು ಮತ್ತು ಬೆಂಗಳೂರಿಗೆ ಭಾರಿ ಮಳೆ ನಿರೀಕ್ಷೆ:
ಉತ್ತರ ಒಳನಾಡಿಗಿಂತ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಲಿದ್ದು, ಇಲ್ಲಿಯೂ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಇದೇ ರೀತಿಯ ಹವಾಮಾನವು ಉತ್ತರ ಒಳನಾಡು ಭಾಗದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮುಂದುವರಿಯಲಿದೆ.

