ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೂ ಖಾಲಿ ಇಲ್ಲ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಸದಸ್ಯ ಯತೀಂದ್ರ ಅವರ ಮಾತುಗಳನ್ನು ಮುಖ್ಯಮಂತ್ರಿಗಳ ಧ್ವನಿ ಎಂಬಂತೆ ಬಿಂಬಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇಂದು ತಾವು ದೆಹಲಿಗೆ ತೆರಳುತ್ತಿದ್ದು, ನಾಳೆ ಪಕ್ಷದ ಕೆಲವು ವರಿಷ್ಠರೊಂದಿಗೆ ಸೌಹಾರ್ದ ಭೇಟಿ ನಡೆಯಲಿದೆ. ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ, ಅರಣ್ಯ ಅಭಿವೃದ್ಧಿ ಶುಲ್ಕಕ್ಕೆ ಸಂಬಂಧಿಸಿದಂತೆ ಕೆಲ ಪ್ರಕರಣಗಳು ಸುಪ್ರೀಂಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದ್ದು, ಈ ಕುರಿತಂತೆ ಹಿರಿಯ ವಕೀಲರೊಂದಿಗೆ ಸಮಾಲೋಚನೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಕಾಂಪಾ ನಿಧಿ, ಎತ್ತಿನಹೊಳೆ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

