ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ತಮ್ಮ ತಂದೆಯವರ ‘ಉತ್ತರಾಧಿಕಾರಿ’ ಎಂದು ಬಣ್ಣಿಸಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬೆನ್ನಲ್ಲೇ, ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ.
ಇಂದು ಸಂಜೆ ನಡೆಯಲಿರುವ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಒಟ್ಟಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಉತ್ತರಾಧಿಕಾರಿ ಹೇಳಿಕೆಯ ಬಳಿಕ ಈ ಇಬ್ಬರು ನಾಯಕರು ಭೇಟಿಯಾಗುತ್ತಿರುವುದು ಇದೇ ಮೊದಲು.
ಪ್ರವಾಸದ ವಿವರ:
ಸಿಎಂ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗಾವಿಯ ಕಿತ್ತೂರಿಗೆ ಆಗಮಿಸಿ, ಸಂಜೆ 7 ಗಂಟೆಗೆ ಶುರುವಾಗುವ ಉತ್ಸವದ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ, ರಾತ್ರಿ 9 ಗಂಟೆಗೆ ಹುಬ್ಬಳ್ಳಿಯಿಂದ ಅದೇ ವಿಮಾನದಲ್ಲಿ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರು ಈ ಪ್ರಮುಖ ಭೇಟಿಯ ಹಿನ್ನೆಲೆಯಲ್ಲಿ ತಮ್ಮ ಉಳಿದ ಎಲ್ಲ ಪ್ರವಾಸಗಳನ್ನು ರದ್ದುಗೊಳಿಸಿ, ಬೆಳಗಾವಿಯಲ್ಲೇ ಉಳಿದುಕೊಂಡಿರುವುದು ಗಮನಾರ್ಹ. ಯತೀಂದ್ರ ಅವರ ಹೇಳಿಕೆ ಮತ್ತು ಅದಾದ ಬಳಿಕ ಮುಖ್ಯಮಂತ್ರಿಗಳು ಹಾಗೂ ಅವರ ಶಿಷ್ಯನ ಭೇಟಿಯು ರಾಜ್ಯ ರಾಜಕೀಯ ವಲಯದಲ್ಲಿ ಹಲವು ಹೊಸ ಲೆಕ್ಕಾಚಾರಗಳಿಗೆ ಮತ್ತು ಚರ್ಚೆಗಳಿಗೆ ವೇದಿಕೆ ಕಲ್ಪಿಸಿದೆ. ಕಿತ್ತೂರು ವೇದಿಕೆಯ ಮೇಲೆ ಇವರಿಬ್ಬರ ರಾಜಕೀಯ ನಡೆ ಏನು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

