ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಣ್ಣ ನೀರಾವರಿ ಇಲಾಖೆಯ ಮಹತ್ವಾಕಾಂಕ್ಷಿ ‘ನೀರಿದ್ದರೆ ನಾಳೆ’ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿ ಅಂತರ್ಜಲ ವೃದ್ಧಿಗೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೀರಿದ್ದರೆ ನಾಳೆ ವಿಶೇಷ ಪರಿಕಲ್ಪನೆ ಮೂಲಕ ನೀರಿನ ಮಹತ್ವ ತಿಳಿಸುವುದು, ರಾಜ್ಯದ ಜಲಮೂಲಗಳನ್ನು ಸಂರಕ್ಷಣೆ ಮಾಡುವುದು, ಜಲಸಂರಕ್ಷಣೆಯಲ್ಲಿ ನಾಗರಿಕರನ್ನು ಪಾಲುದಾರರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 27 ತಾಲೂಕುಗಳ 525 ಅಂತರ್ಜಲ ಬಳಕೆ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ ನೂರಕ್ಕೂ ಹೆಚ್ಚು ಗ್ರಾಮಪಂಚಾಯಿತಿಗಳಲ್ಲಿ ಸಣ್ಣ ನೀರಾವರಿ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ 2025-26ನೇ ಸಾಲಿನಲ್ಲಿ 200 ಕೋಟಿ ವೆಚ್ಚದಲ್ಲಿ ಅಂತರ್ಜಲ ಅಭಿವೃದ್ಧಿ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.
ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ನೀರಿದ್ದರೆ ನಾಳೆ ಪರಿಕಲ್ಪನೆ ಉಪಯುಕ್ತವಾಗಿದ್ದು, ಸುಂದರ ಹಾಗೂ ಸುಭದ್ರ ನಾಳೆಗಳ ಖಾತರಿಗಾಗಿ ಈ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳೋಣ ಎಂದು ಅವರು ಮನವಿ ಮಾಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ಅಂತರ್ಜಲ ವೃದ್ಧಿಯತ್ತ ಸರ್ಕಾರದ ಚಿತ್ತ: ‘ನೀರಿದ್ದರೆ ನಾಳೆ’ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಸಿದ್ಧತೆ

