Monday, November 3, 2025

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ?: ವಿಶ್ವವಿದ್ಯಾಲಯದ ಪ್ರೊಫೆಸರ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಮೈಲಾರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಅವರನ್ನು ವಿಚಾರಣೆಗಾಗಿ ಇರಿಸಲಾಗಿದೆ.

ಪೊಲೀಸರ ಪ್ರಕಾರ, ಮೈಲಾರಪ್ಪ ಸದ್ಯ ವಿಶ್ವವಿದ್ಯಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, 2022ರಲ್ಲಿ ವಿಶ್ವವಿದ್ಯಾಲಯದ ಉಪ ಕುಲಪತಿಯಾಗಿದ್ದರು. ಈ ಘಟನೆಯು ಮತ್ತೆ ಕಾರ್ಯಸ್ಥಳದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯವನ್ನು ಗಂಭೀರವಾಗಿ ಮುಂದಿಟ್ಟಿದೆ.

ಮೂಲಗಳ ಪ್ರಕಾರ, ಈ ಪ್ರಕರಣದ ಬೇರುಗಳು 2022ರಿಂದಲೇ ಆರಂಭವಾಗಿವೆ. ಅದೇ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮೈಲಾರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. 2022ರಿಂದ 2024ರವರೆಗೆ ಈ ಕಿರುಕುಳ ಮುಂದುವರಿದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆ ಮೊದಲು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಇದೀಗ ಅವರು ಬೆದರಿಕೆ ನೀಡುತ್ತಿದ್ದಾರೆ ಎಂಬ ಹೊಸ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ದೂರಿನ ಪ್ರಕಾರ, ಮೈಲಾರಪ್ಪ ಅವರು ಮಹಿಳೆಯ ಮನೆಯನ್ನು ತಮ್ಮ ಹೆಸರಿಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದು, ಅದಕ್ಕೆ ಒಪ್ಪದಿದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆ ಭಯಭೀತರಾಗಿ ಬಸವೇಶ್ವರನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮೈಲಾರಪ್ಪ ಅವರನ್ನು ಬಂಧಿಸಿದ್ದಾರೆ.

2022ರಲ್ಲಿ ಉಪಕುಲಪತಿಯಾಗಿದ್ದ ಸಮಯದಲ್ಲಿಯೂ ಮೈಲಾರಪ್ಪ ಅವರ ವಿರುದ್ಧ ಇದೇ ರೀತಿಯ ಆರೋಪಗಳು ಕೇಳಿಬಂದಿದ್ದವು. ಈಗ ಹೊಸ ದೂರು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

error: Content is protected !!