Sunday, November 2, 2025

ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ: ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿಕ್ಕಮಗಳೂರು ಜಿಲ್ಲೆಯ ಕೆರೆಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಘಟನೆ ಸಂಬಂಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೆ ದಾಳಿಯಿಂದ ಸಾವಿಗೀಡಾದ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದರು. ಈ ವೇಳೆ ಆನೆ ದಾಳಿ ನಡೆಸಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ನಿಷ್ಕ್ರಿಯತೆಯ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಮೃತರ ಕುಟುಂಬಗಳಿಗೆ ನ್ಯಾಯ ಮತ್ತು ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರು ಅರಣ್ಯ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡುವಂತೆ ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ವನ್ಯಜೀವಿ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ದೂರಿದ್ದಾರೆ. ಡಿ.ಎಫ್.ಓ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಾಣಿಗಳಿಗೆ ಹಾನಿಯಾದರೆ ಕಾನೂನು ಕ್ರಮ ತೆಗೆದುಕೊಳ್ಳುವ ಸರ್ಕಾರ, ಮನುಷ್ಯ ಜೀವಕ್ಕೆ ಯಾವುದೇ ಬೆಲೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು ದಿವಸ ತಾಳ್ಮೆಯಿಂದ ಕಾದಿದ್ದೇವೆ, ಇನ್ನು ತಾಳ್ಮೆ ಕಾಯಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

error: Content is protected !!