‘ಕೊಡವ ಅಭಿವೃದ್ದಿ ನಿಗಮ’ ಸ್ಥಾಪನೆ ಪ್ರಸ್ತಾಪ ಸರಕಾರದ ಮುಂದಿಲ್ಲ: ಕೋಟ

ಹೊಸದಿಗಂತ ವರದಿ, ಮಡಿಕೇರಿ:

ಕೊಡವ ಸಮುದಾಯವನ್ನು ಒಳಗೊಂಡಂತೆ ಹಲವು ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ಈಗಾಗಲೇ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುತ್ತಿದೆ. ಹೀಗಾಗಿ ಪ್ರತ್ಯೇಕ ‘ಕೊಡವ ಅಭಿವೃದ್ಧಿ ನಿಗಮ’ ಸ್ಥಾಪಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ವಿಧಾನ ಪರಿಷತ್‍’ನಲ್ಲಿ ಸದಸ್ಯೆ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ದೇವರಾಜ ಅರಸು ನಿಗಮಕ್ಕೆ ಮತ್ತಷ್ಟು ಶಕ್ತಿ ತುಂಬುವ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ ಕೊಡವ ಸಮುದಾಯ ಅಭಿವೃದ್ಧಿಗಾಗಿ 10 ಕೋಟಿ ರೂ.ಗಳನ್ನು ಘೋಷಿಸಲಾಗಿದೆ. ಡಿ. ದೇವರಾಜ ಅರಸು ನಿಗಮದ ಮೂಲಕವೇ ಅನುದಾನಗಳನ್ನು ಬಿಡುಗಡೆ ಮಾಡಲಾಗುತ್ತದೆ. ಹಿಂದುಳಿದ ವರ್ಗಗಳ ಇಲಾಖೆ ಸಚಿವನಾಗಿ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಕೊಡವ ಸಮುದಾಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಕೊಡವ ಅಭಿವೃದ್ದಿ ನಿಗಮ ಸ್ಥಾಪನೆ ಬಗ್ಗೆ ಸಾಕಷ್ಟು ಒತ್ತಾಯ ಕೇಳಿ ಬಂದರೂ ನಿಗಮ ಸ್ಥಾಪನೆಗೆ ಸರಕಾರ ಮುಂದಾಗದಿರುವ ಕುರಿತು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ಕೊಡಗು ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಕಾವೇರಿ ಮಾತೆಯನ್ನು ಪೂಜಿಸುವ ಮೂಲಕ ದೇಶಕ್ಕೆ ಒಳ್ಳೆಯದಾಗಲಿ ಎಂದು ಬಯಸುತ್ತೇವೆ. ಆದರೆ ಅಂತಹ ಜಿಲ್ಲೆಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ವೀಣಾ ಅಚ್ಚಯ್ಯ ಸದನದಲ್ಲಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೊಡವ ಸಮುದಾಯದ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ನಿಗಮವೇ ಇಲ್ಲದ ಮೇಲೆ ಹಣ ಕೊಡುವುದಾದರೂ ಯಾರಿಗೆ ಎಂದು ಪ್ರಶ್ನಿಸಿದ ವೀಣಾ ಅಚ್ಚಯ್ಯ, ಈ ಹಿಂದಿನ ಮೈತ್ರಿ ಸರಕಾರ ಕೊಡವ ಸಮಾಜಕ್ಕೆ 10 ಕೋಟಿ, ಟರ್ಫ್ ಮೈದಾನಕ್ಕೆ 5 ಕೋಟಿ ಅನುದಾನ ಘೋಷಿಸಿತ್ತು. ಈ ಹಣವೂ ಬಂದಿಲ್ಲ ಎಂದು ಕಿಡಿಕಾರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವೀಣಾ ಅಚ್ಚಯ್ಯ ಅವರ ಬೇಡಿಕೆ ನ್ಯಾಯಯುತವಾಗಿದೆ ಎಂದು ಬೆಂಬಲ ವ್ಯಕ್ತಪಡಿಸಿದರಲ್ಲದೆ, ಈ ಕುರಿತು ಆತಂಕ ಬೇಡ, ಸರಕಾರ ನಿಮ್ಮೊಂದಿಗೆ ಇರಲಿದೆ ಎಂದು ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!