ಹೊಸದಿಗಂತ ವರದಿ,ಪಾಂಡವಪುರ :
ತಾಲೂಕಿನ ಮೇಲುಕೋಟೆ ಕಣಿವೆ ಸಮೀಪದ ಬಳಿ ಕೆಎಸ್ಆರ್ಟಿಸಿ ಬಸ್ಸು ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಹಾಗೂ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಗಳು.
ಮೇಲುಕೋಟೆಯಿಂದ ಪಾಂಡವಪುರ ಕಡೆಗೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಒಪ್ಪಂದದ ಬಸ್ ಹಾಗೂ ತಾಲೂಕಿನ ಜಕ್ಕನಹಳ್ಳಿಯಿಂದ ಮೇಲುಕೋಟೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮನಮುಲ್ ಕಾಡೇನಹಳ್ಳಿ ರಾಮಚಂದ್ರು ಹಾಗೂ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಗಾಯಗೊಂಡಿರುವ ರಾಮಚಂದ್ರು ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಾಘಾತದ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ಮುಖಂಡರಾದ ಬಲರಾಮೇಗೌಡ ಮತ್ತು ಶೇಖರ್ ಎಂಬುವವರು ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಪೊಲೀಸರು ಅಪಘಾತಕ್ಕೀಡಾದ ಎರಡು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.