ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ 17ನೇ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ಸಿಪಿ ರಾಧಾಕೃಷ್ಣನ್ ಅವರು ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್ 9 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅವರು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಐತಿಹಾಸಿಕ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ ಎಂದು ದಿಗಂಬರ ಜೈನ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ.
ಈ ಚೊಚ್ಚಲ ಭೇಟಿಯ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರು ಶ್ರವಣಬೆಳಗೊಳದಲ್ಲಿ 108 ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಮತ್ತು ನಾಲ್ಕನೇ ಬೆಟ್ಟದ ಪದನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಮಹತ್ವದ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಸಹ ಪಾಲ್ಗೊಳ್ಳಲಿದ್ದಾರೆ ಎಂದು ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದ ಸಿ.ಪಿ. ರಾಧಾಕೃಷ್ಣನ್ ಅವರು ಒಟ್ಟು 452 ಮತಗಳನ್ನು ಪಡೆದು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದರು.

