ಪಠ್ಯ ಪುಸ್ತಕ ವಿವಾದ: ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವರಿಗೆ ಸೂಚಿಸಿದ್ದೇನೆ ಎಂದ ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಮಂಗಳೂರು:

ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪುಸ್ತಕ ಆಯ್ಕೆ ಸಮಿತಿಯಿಂದ ಕೈಬಿಡಬೇಕು ಎಂಬ ಹೋರಾಟದ ಕುರಿತಾಗಿ ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸೂಚನೆ ನೀಡಿದ್ದೇನೆ. ಅವರು ಎಲ್ಲಾ ಆಯಾಮಗಳನ್ನು ಅಭ್ಯಸಿಸಿ ವರದಿಯನ್ನು ಸಿದ್ಧ ಪಡಿಸಲಿದ್ದಾರೆ. ನಾಳೆ ವರದಿಯನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ವರದಿಯ ಅಂಶಗಳನ್ನು ಪರಿಗಣಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಮಂಗಳವಾರ ಸಂಜೆ ಉಡುಪಿಗೆ ತೆರಳುವ ದಾರಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದರು.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ವಿಷಯದ ಕುರಿತಾಗಿ ಈಗಾಗಲೇ ಆದಿಚುಂಚನಗಿರಿ ಸ್ವಾಮೀಜಿ ಅವರನ್ನು ಈಗಾಗಲೇ ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ನುಡಿದರು.
ಮಳಲಿ ಮಸೀದಿ ಪ್ರಕರಣದ ಕುರಿತಾಗಿ ತಾನು ಪ್ರತಿಕ್ರಿಯಿಸುವುದಿಲ್ಲ. ಅದು ನ್ಯಾಯಾಲಯದಲ್ಲಿ ಇರುವುದರಿಂದ ಪ್ರತಿಕ್ರಿಯಿಸುವುದು ಸೂಕ್ತವಲ್ಲ. ತೀರ್ಪು ಬರಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮುಖ್ಯಮಂತ್ರಿಗಳು ತಿಳಿಸಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮುಖ್ಯಮಂತ್ರಿಗಳ ಜೊತೆಗಿದ್ದರು.
ಸಚಿವರಾದ ಸುನೀಲ್ ಕುಮಾರ್, ಎಸ್.ಅಂಗಾರ, ಶಾಸಕರಾದ ವೈ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮತ್ತು ಪೊಲೀಸ್ ಆಯುಕ್ತ ಶಶಿಕುಮಾರ್ ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!