ಹೊಸದಿಗಂತ ಆನ್‌ಲೈನ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸಿದೆ.
ಬೆಂಗಳೂರಿನ ಶಾಪಿಂಗ್ ಮಾಲ್‌ಗಳು, ಬಸ್, ರೈಲ್ವೆ ನಿಲ್ದಾಣಗಳು, ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಈ ನಿಯಮ ಉಲ್ಲಂಘನೆಯಾಗದಂತೆ ಬಿಬಿಎಂಪಿ ಮಾರ್ಷಲ್‌ಗಳು ಹದ್ದಿನಕಣ್ಣಿರಿಸಲಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆಯ ವಿಶೇಷ ಆಯುಕ್ತ ಹರೀಶ್ ಕುಮಾರ್, ಬೆಂಗಳೂರಿನಲ್ಲಿ ಕಳವಳಕಾರಿಯಾಗಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಜಾರಿಯಾಗಿದೆ ಎಂದಿದ್ದಾರೆ.
ಪ್ರಸ್ತುತ ಮಾಸ್ಕ್ ಧಾರಣೆ ಕಡ್ಡಾಯವಾಗಿದೆಯಾದರೂ ಸದ್ಯ ಯಾವುದೇ ದಂಡ ವಿಧಿಸದಿರಲು ಆಡಳಿತ ನಿರ್ಧರಿಸಿದೆ.