ಹೊಸದಿಗಂತ ವರದಿ, ಮೈಸೂರು:
ಬಿಜೆಪಿ ಸರ್ಕಾರ ಮೈಸೂರಿನಲ್ಲಿ ಮಾಡಿರುವಷ್ಟು ಅಭಿವೃದ್ಧಿ ಕೆಲಸಗಳನ್ನು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯ ಮಾಡಲಿಲ್ಲ ಎಂದು ಉನ್ನತ ಶಿಕ್ಷಣ, ಐಟಿಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದರು.
ಮಂಗಳವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿವತಿಯಿಂದ ಆಯೋಜಿಸಲಾಗಿದ್ದ ಅತಿಥಿ ಉಪನ್ಯಾಸಕರೊಂದಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ನಡುವೆ ಸಾವಿರಾರು ಕೋಟಿ ರೂ ವೆಚ್ಚದಲ್ಲಿ ದಶಪಥ ರಸ್ತೆಯನ್ನು ನಿರ್ಮಾಣ ಮಾಡುತ್ತಿದೆ. ಸೆಮಿಕಂಡೆಕ್ಟರ್ ಸ್ಲ್ಯಾಬ್ ಪಾರ್ಕ್ನ್ನು ಮೈಸೂರಿನಲ್ಲಿ ಸ್ಥಾಪಿಸಲಾಗುತ್ತಿದೆ. ಅಲ್ಲದೇ ಟೆಕ್‌ಪಾರ್ಕ್ ನಿರ್ಮಾಣವೂ ಆಗಲಿದೆ. ಮಂಡಕಳ್ಳಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಹಾಗೂ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ. ಉಡಾನ್ ಯೋಜನೆಯಡಿ ಈ ವಿಮಾನ ನಿಲ್ದಾಣದಿಂದ ದೇಶದ ಇತರೆ ವಿಮಾನ ನಿಲ್ದಾಣಗಳಿಗೆ ವಿಮಾನ ಹಾರಾಟವನ್ನೂ ನಡೆಸಲಾಗುತ್ತಿದೆ. ಕೆ.ಆರ್. ಆಸ್ಪತ್ರೆ, ಮೆಡಿಕಲ್ ಕಾಲೇಜ್ ಅಭಿವೃದ್ಧಿ ಮಾಡಲಾಗುತ್ತಿದೆ. ಸಾವಿರಾರು ಕಿ.ಮಿ ರಸ್ತೆಯನ್ನು ಅಭಿವೃದ್ಧಿ ಮಾಡಲಾಗಿದೆ. ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮೈಸೂರಿನಲ್ಲಿ ಮಾಡಲಾಗುತ್ತಿದೆ. ಏನೇನು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ ಎಂಬುದನ್ನು ಈಗಾಗಲೇ ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯನವರು ತಮ್ಮ ಅಧಿಕಾರದ ಅವಧಿಯಲ್ಲಿ ಮೈಸೂರಿನಲ್ಲಿ ಏನೇನು ಅಭಿವೃದ್ಧಿ ಕೆಲಸಗಳನ್ನು ಮಾಡಿದರು ಎಂದು ಹೇಳಲಿ, ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು. ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಮಾಡಿದ್ದು ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಹಳೇ ಮದ್ಯ ಹೊಸ ಬಾಟಲಿ ಎಂಬAತಾಗಿದೆ ಅವರ ಹೇಳಿಕೆ ಎಂದು ಟೀಕಿಸಿದರು.
ಐದು ವರ್ಷಗಳ ಕಾಲ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ಮೈಸೂರನ್ನು ಅಭಿವೃದ್ಧಿ ಮಾಡುವಲ್ಲಿ ವಿಫಲರಾಗಿದ್ದಾರೆ. ಏನೂ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಆದರೂ ಕೂಡ ಮಾಡಿದ್ದೇನೆ ಎಂದು ಸುಳ್ಳು ಹೇಳುವ ಮೂಲಕ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದರು.
ಪ್ರತ್ಯೇಕವಾಗಿ ಯೋಗ ವಿವಿ ಸ್ಥಾಪನೆ ಅವಶ್ಯವಿಲ್ಲ; ಪ್ರಧಾನಿ ನರೇಂದ್ರ ಮೋದಿ ಅವರು, ಜೂನ್ 21 ರಂದು ಮೈಸೂರಿನಲ್ಲಿ ನಡೆಯಲಿರುವ ವಿಶ್ವ ಯೋಗದಿನಾಚರಣೆಯಲ್ಲಿ ಭಾಗವಹಿಸಲೆಂದು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಯೋಗ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂಬ ಬೇಡಿಕೆಯಿದೆ. ಈ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ ಮನುಷ್ಯನ ಆರೋಗ್ಯಕ್ಕೆ ಅಗತ್ಯವಾದ ಯೋಗಕ್ಕೆ ಪ್ರತ್ಯೇಕ ವಿವಿಯನ್ನು ಸ್ಥಾಪಿಸುವ ಅಗತ್ಯವಿಲ್ಲ, ಇತರೆ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡೆ ಚಟುವಟಿಕೆಗಳೊಂದಿಗೆ ಯೋಗ ಕೂಡ ಇರಬೇಕು ಎಂದು ಹೇಳಿದರು.
ರಾಜ್ಯ ಸಭಾ ಚುನಾವಣೆಯಲ್ಲಿ ಮೂರು ಸ್ಥಾನವನ್ನೂ ಗೆಲ್ಲುತ್ತೇವೆ; ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದಿಂದ ಮೂರು ಅಭ್ಯರ್ಥಿಗಳನ್ನು ಹಾಕಿದ್ದೇವೆ, ಜೆಡಿಎಸ್, ಕಾಂಗ್ರೆಸ್‌ನವರು ಏನೇ ಪ್ರಯತ್ನ ಮಾಡಿದರೂ, ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ; ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಪರ ಉತ್ತಮ ವಾತಾವರಣವಿದೆ. ಹಾಗಾಗಿ ಪಕ್ಷದ ಅಭ್ಯರ್ಥಿ ಮೈ.ವಿ.ರವಿಶಂಕರ್ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಉತ್ತಮ ನಾಯಕತ್ವ, ಜನಪರವಾದ ಆಡಳಿತವನ್ನು ಬಿಜೆಪಿಯಿಂದ ಮಾತ್ರ ನೀಡಲು ಸಾಧ್ಯ.
ಸರ್ಕಾರಿ ನೌಕರರಿಗೆ ಐದು ಹಾಗೂ 6 ನೇ ವೇತನವನ್ನು ಜಾರಿಗೆ ತಂದಿದ್ದು ಬಿಜೆಪಿ ಸರ್ಕಾರವೇ ವಿನಃ ಸಿದ್ದರಾಮಯ್ಯ ಸರ್ಕಾರವಲ್ಲ. ಬಿಜೆಪಿ ಸರ್ಕಾರದ ಆಡಳಿತದಿಂದ ಸರ್ಕಾರಿ ನೌಕರರು ತೃಪ್ತರಾಗಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದ ಬಗ್ಗೆ ಮೆಚ್ಚುಗೆ, ಒಲವು ಹೊಂದಿದ್ದಾರೆ. ಹಾಗಾಗಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮೈಸೂರು ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ನಗರ ವಕ್ತಾರ ಎಂ.ಎ.ಮೋಹನ್, ಮಹಿಳಾ ಮೋರ್ಚಾದ ಅಧ್ಯಕ್ಷೆ ಹೇಮಾನಂದೀಶ್, ಮುಖಂಡರಾದ ಎಸ್.ಜಯಪ್ರಕಾಶ್ (ಜೆಪಿ), ಶಿವಕುಮಾರ್, ಈ.ಸಿ.ನಿಂಗರಾಜೇಗೌಡ ಮತ್ತಿತರರು ಉಪಸ್ಥಿತರಿದ್ದರು.