ಹೊಸದಿಗಂತ ವರದಿ, ಧಾರವಾಡ:
ಕೋಮುವಾದಿ ಬಿಜೆಪಿ ಸೋಲಿಸಲು ಜೆಡಿಎಸ್ ಕಾಂಗ್ರೆಸ್ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋರಿದರು.
ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರ ಪ್ರಚಾರಕ್ಕೆ ಆಗಮಿಸಿದ ವೇಳೆ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕುಮಾರಸ್ವಾಮಿ ಅವರಿಗೆ ನಿಜವಾಗಲೂ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂಬ ಮನಸ್ಸಿದ್ದರೆ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿ ಎಂದರು.
ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಿದ್ದಾಗ ಕಾಂಗ್ರೆಸ್ ಅವರನ್ನು ಬೆಂಬಲಿಸಿತ್ತು. ನಾವೀಗ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸಿದ್ದು, ಅವರನ್ನು ಗೆಲ್ಲಿಸಲು ಕುಮಾರಸ್ವಾಮಿ ಕೈಜೋಡಿಸಲಿ ಎಂದರು.
ಜೆಡಿಎಸ್ ಆಡೋಣ ಬಾ, ಕೆಡಿಸೋಣ ಬಾ ಆಟ ಆಡುತ್ತಿದೆ. ಕಾಂಗ್ರೆಸ್ ಅಧಿಕ ಸ್ಥಾನಗೆದ್ದಿದ್ದರೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಹೀಗಿರುವಾಗ ಕುಮಾರಸ್ವಾಮಿ ಅವರು ಕಾಂಗ್ರೆಸ್ ಕಡೆ ಬೊಟ್ಟು ಮಾಡಿ ಮಾತನಾಡುವುದು ಸರಿಯಲ್ಲ ಎಂದು ಪ್ರಶ್ನೆಗೆ ಉತ್ತರಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ