ಹೊಸದಿಗಂತ ವರದಿ,ಮಂಗಳೂರು:
ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಹಿರಿಯ ರಾಜಕಾರಣಿ, ಮಾಜಿ ಶಾಸಕ, ರಾಜ್ಯ ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ, ಸಹಕಾರಿ ಕ್ಷೇತ್ರದ ದಿಗ್ಗಜ ಎ.ಜಿ.ಕೊಡ್ಗಿ(ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ) ಅವರು ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ಸಮಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಸೋಮವಾರ ನಿಧನರಾಗಿದ್ದಾರೆ.
1929 ರ ಅ.1ರಂದು ಜನಿಸಿದ ಎ.ಜಿ.ಕೊಡ್ಗಿಯವರು ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾದದು. ಚಾಣಾಕ್ಷ ರಾಜಕಾರಣಿ ಎಂದೇ ಗುರುತಿಸಿಕೊಂಡ ಇವರು ರಾಜಕೀಯ ಹಾಗೂ ಸಹಕಾರಿ ಕ್ಷೇತ್ರ ಎರಡರಲ್ಲೂ ಹೆಸರು ಮಾಡಿದವರು.
ಆರಂಭದಲ್ಲಿ ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೊಡ್ಗಿ ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83 ರವರೆಗಿ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಎಪಿಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ 1982-1990 ರವರೆಗೆ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕೊಡ್ಗಿಯವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ರಾಜೇಶ್ ನಾಯ್ಕ್ , ಸಂಜೀವ ಮಠಂದೂರು, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸೇರಿದಂತೆ ಹಲವು ಮಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.