ಹೊಸದಿಗಂತ ವರದಿ ಮಡಿಕೇರಿ:
ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಕಾರ್ಮಿಕ ಸಾವಿಗೀಡಾದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿ ಕಾಫಿ ತೋಟದ ಕಾರ್ಮಿಕ ಹನುಮಂತ(57)ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ.
ಸೋಮವಾರ ಮಧ್ಯಾಹ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದಾಗ ಹನುಮಂತ ಸ್ಥಳದಲ್ಲೇ ಸಾವಿಗೀಡಾದರೆ, ಮತ್ತೋರ್ವ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಹಾಗೂ ಅರಣ್ಯ ಇಲಾಖೆಯ ನಿರ್ಲಕ್ಷವೇ ಅಮಾಯಕ ಕಾರ್ಮಿಕನ ಸಾವಿಗೆ ಕಾರಣ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಆರೋಪಿಸಿದ್ದಾರೆ. ಈ ನಡುವೆ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಲು ಸರಕಾರ ಹಾಗೂ ಅರಣ್ಯ ಇಲಾಖೆ ಮುಂದಾಗಬೇಕು ಎಂದು ಕಾರ್ಮಿಕ ಮುಖಂಡರು ಒತ್ತಾಯಿಸಿದ್ದಾರೆ.

