ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪು ಕೋಟೆ ಬಳಿಯ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಬಳಿ ಇಂದು ಸಂಜೆ ನಡೆದ ಭೀಕರ ಸ್ಫೋಟದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ದೇಶದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಘಟನೆ ವಿವರ:
ಇಂದು ಸಂಜೆ 6:45 ರಿಂದ 7 ಗಂಟೆಯ ಅವಧಿಯಲ್ಲಿ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ-1ರ ಪಾರ್ಕಿಂಗ್ ಪ್ರದೇಶದಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಪಾರ್ಕಿಂಗ್‌ನಲ್ಲಿದ್ದ 6 ಕಾರ್‌ಗಳು ಹಾಗೂ 4 ಆಟೋಗಳು ಛಿದ್ರಛಿದ್ರವಾಗಿವೆ. ಸ್ಫೋಟದ ಭೀಕರ ಸದ್ದು ಮತ್ತು ಬೆಂಕಿಯಿಂದಾಗಿ ಸುತ್ತಮುತ್ತಲಿನ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಸಂತ್ರಸ್ತರ ಮಾಹಿತಿ:
ಗಾಯಗೊಂಡಿರುವವರಲ್ಲಿ 10ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಧಾವಿಸಿದ 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತೋಟಿಗೆ ತಂದಿವೆ.
ಗಣ್ಯರ ಸಂತಾಪ:
ಈ ಭೀಕರ ದುರಂತದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ. “ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ನೆರವು ನೀಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಮೃತರ ಕುಟುಂಬಗಳಿಗೆ ಕಂಬನಿ ಮಿಡಿದಿದ್ದಾರೆ.
ತನಿಖೆ ಪ್ರಗತಿ:
ಇದು ಬಾಂಬ್ ಸ್ಫೋಟವೇ ಅಥವಾ ಸಿಎನ್‌ಜಿ ಸ್ಫೋಟವೇ ಎಂಬ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ದೆಹಲಿ ಪೊಲೀಸರು ಮತ್ತು ಸಿಆರ್‌ಪಿಎಫ್ ತಂಡಗಳು ಸ್ಥಳದಲ್ಲಿ ಇಂಚಿಂಚೂ ಶೋಧ ನಡೆಸುತ್ತಿವೆ. ಸ್ಫೋಟದ ಕಾರಣ ಪತ್ತೆಹಚ್ಚಲು ವಿಧಿವಿಜ್ಞಾನ ಪ್ರಯೋಗಾಲಯದ ತಂಡ ಕೂಡ ಸ್ಥಳಕ್ಕೆ ಆಗಮಿಸಿ, ತನಿಖೆಯಲ್ಲಿ ತೊಡಗಿದೆ.

