October 13, 2026
Tuesday, October 13, 2026
spot_img

ಮಹಿಳೆಯರಿಗೆ ಮಾಸಿಕ ಒಂದು ಋತುಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಋತುಚಕ್ರ ರಜೆ ನೀತಿ 2025ಕ್ಕೆ ಅ.9ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಸಂಬಂಧ ಬುಧವಾರ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾ‌ರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ, ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನು ಮಹಿಳಾ ನೌಕರರು ಆಯಾ ತಿಂಗಳ ʼಋತುಚಕ್ರ ರಜೆʼ ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ʼಋತುಚಕ್ರ ರಜೆʼ ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.

ಪ್ರತಿ ತಿಂಗಳು ಒಂದು ದಿನದ ʼಋತುಚಕ್ರ ರಜೆʼ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ.

Must Read