ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಹಾಗೂ ವಿವಾದಾತ್ಮಕ ನಿರ್ಧಾರವೊಂದಕ್ಕೆ ಒಪ್ಪಿಗೆ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ರಸ್ತೆಗಳ ಸ್ವಚ್ಛತೆಗಾಗಿ ಕಸ ಗುಡಿಸುವ ಯಂತ್ರಗಳನ್ನು ಬಾಡಿಗೆಗೆ ಪಡೆಯಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಬರೋಬ್ಬರಿ ₹613.25 ಕೋಟಿ ವೆಚ್ಚಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.
ಸಭೆಯ ನಂತರ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು, ಮುಂದಿನ 7 ವರ್ಷಗಳ ಅವಧಿಗೆ ಒಟ್ಟು 46 ಕಸಗುಡಿಸುವ ಯಂತ್ರಗಳನ್ನ ಮುಖ್ಯ ರಸ್ತೆ ಮತ್ತು ಉಪ ಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಬಾಡಿಗೆ ಆಧಾರದ ಮೇಲೆ ಪಡೆಯಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ನೂರಾರು ಕೋಟಿ ರೂಪಾಯಿಗಳ ಈ ಬೃಹತ್ ಬಾಡಿಗೆ ಒಪ್ಪಂದದ ನಿರ್ಧಾರವು ತೀವ್ರ ಚರ್ಚೆಗೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

