ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣನವರ ಪುತ್ರ, ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯ ಅಮಾನತು ಮತ್ತು ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಿತು. ಆದರೆ, ನ್ಯಾಯಾಲಯವು ಪ್ರಾಸಿಕ್ಯೂಷನ್ ಪರ ವಾದ ಮಂಡನೆಗಾಗಿ ವಿಚಾರಣೆಯನ್ನು ನವೆಂಬರ್ 24ಕ್ಕೆ ಮುಂದೂಡಿದೆ. ಇದರೊಂದಿಗೆ, ಪ್ರಜ್ವಲ್ ರೇವಣ್ಣ ಅವರ ಜೈಲುವಾಸ ಸದ್ಯಕ್ಕೆ ಮುಂದುವರಿಯಲಿದೆ.
ಹಾಸನದ ಹೊಳೆನರಸೀಪುರದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು ವಾದ ಮಂಡಿಸಿದರು. ಅವರು ವಿಚಾರಣಾಧೀನ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಪ್ರಬಲ ಆಕ್ಷೇಪಗಳನ್ನು ವ್ಯಕ್ತಪಡಿಸಿದರು. ಪ್ರಮುಖವಾಗಿ, “ನಮ್ಮ ವಾದವನ್ನು ಸೂಕ್ತ ರೀತಿಯಲ್ಲಿ ಆಲಿಸದೇ ವಿಚಾರಣಾಧೀನ ನ್ಯಾಯಾಲಯ ಗರಿಷ್ಠ ಶಿಕ್ಷೆಯನ್ನು ವಿಧಿಸಿದೆ,” ಎಂದು ವಕೀಲರು ಆಕ್ಷೇಪಿಸಿದರು.
ಈ ವಾದಗಳ ಹಿನ್ನೆಲೆಯಲ್ಲಿ, ಪ್ರಜ್ವಲ್ ಅವರಿಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡಬೇಕೆಂದು ಸಿದ್ಧಾರ್ಥ್ ಲೂತ್ರಾ ಅವರು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಮುಂದಿನ ವಿಚಾರಣೆ ನ. 24ಕ್ಕೆ
ನ್ಯಾಯಮೂರ್ತಿಗಳಾದ ಕೆ.ಎಸ್ ಮುದಗಲ್ ಮತ್ತು ಟಿ. ವೆಂಕಟೇಶ್ ನಾಯಕ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಇಂದು ಜಾಮೀನು ಮಂಜೂರಾಗಲಿಲ್ಲ. ಮುಂದಿನ ವಿಚಾರಣೆಯನ್ನು ನವೆಂಬರ್ 24ಕ್ಕೆ ಮುಂದೂಡಲಾಗಿದ್ದು, ಅಂದು ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಲಿದ್ದಾರೆ.

