Saturday, November 15, 2025

ಬಂಟ್ವಾಳ ಬಳಿ ಭೀಕರ‌ ಅಪಘಾತ: ಮೂವರ ದಾರುಣ ಸಾವು, ಆರು ಮಂದಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶನಿವಾರ ಮುಂಜಾನೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಕಾರೊಂದು ಬಡಿದು ಸಂಭವಿಸಿದ ಬೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದ‌ 9 ಮಂದಿ ಮುಂಜಾನೆ 4.45 ರ ಹೊತ್ತಿಗೆ ಬಿ.ಸಿ.ರೋಡಿನ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಮೃತರನ್ನು ಬೆಂಗಳೂರಿನ ಪೀಣ್ಯಾ ನಿವಾಸಿಗಳಾದ ರವಿ (64) ರಮ್ಯ (23) ಹಾಗೂ ನಂಜಮ್ಮ (75) ಎಂದು ಗುರುತಿಸಲಾಗಿದ್ದು,ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಸಣ್ಣಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಮೃತಪಟ್ಟ ರಮ್ಯಾ ಅವರು ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಎಂದು ಹೇಳಲಾಗಿದೆಯಾದರೂ ಖಚಿತಪಟ್ಟಿಲ್ಲ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಉಳಿದಂತೆ ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರು ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಂತೆ ಕೊನೆಯುಸಿರೆಳೆದಿದ್ದಾರೆಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

error: Content is protected !!