ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ಪ್ರಧಾನಿ ಮೋದಿ

ಹೊಸದಿಗಂತ ವರದಿ,ಮಂಗಳೂರು:

ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅವರು ಶುಕ್ರವಾರ ಇಲ್ಲಿನ ಗೋಲ್ಡ್‌ ಫಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.
ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ಕು ಪಟ್ಟು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದಲ್ಲಿ 30 ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ 30 ಲಕ್ಷ ಫಲಾನುಭಿಗಳಿಗೆ ೪ಸಾವಿರ ಕೋಟಿ ರೂ.ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.
ದೇಶದ ಪ್ರಥಮ ಸ್ವದೇಶಿ ಏರ್‌ಕ್ರಾಫ್ಟ್ ವಾಹಕ ನೌಕೆಯನ್ನು ಇಂದು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ 3800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ. ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ ದ್ವಿಗುಣಳ್ಳಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!