ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಉಮೇಶ್ ಕತ್ತಿ ನಿಧನಕ್ಕೆ ರಾಜಕಾರಣಿಗಳು, ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕತ್ತಿ ನಿಧನದ ಬೆನ್ನಿಗೇ ರಾಜ್ಯ ರಾಜಕೀಯ ವಲಯವೇ ಶೋಕಸಾಗರದಲ್ಲಿ ಮುಳುಗಿದ್ದು, ’ಆಹಾರ, ನಾಗರಿಕ ಸರಬರಾಜು ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ಅವರ ಅಕಾಲಿಕ ನಿಧನ ತೀವ್ರ ಆಘಾತವನ್ನುಂಟು ಮಾಡಿದೆ. ಉಮೇಶ ಕತ್ತಿ ಹಾಗೂ ನಾನು ಬಹಳಷ್ಟು ವರ್ಷ ಜೆಡಿಎಸ್ ಪಕ್ಷದಲ್ಲಿ ಇದ್ದೆವು. ಬಹಳ ಆತ್ಮೀಯರಾಗಿದ್ದರು. ಉತ್ತರ ಕರ್ನಾಟಕ ಬಗ್ಗೆ ವಿಶೇಷ ಅಭಿಮಾನ ಹೊಂದಿದ್ದ ಅವರು, ಸದಾ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿದ್ದರು. ಅವರ ಅಗಲಿಕೆ ಉತ್ತರ ಕರ್ನಾಟಕದ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಕೂಡ ಕತ್ತಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಬಾಯಿ ಮತ್ತು ಹೃದಯದ ಮಧ್ಯೆ ಫಿಲ್ಟರ್ ಇಲ್ಲದೆ, ಮನಸ್ಸಿಗೆ ಅನ್ನಿಸಿದ್ದನ್ನು ನೇರವಾಗಿ ಹೇಳುತ್ತಿದ್ದ ನೇರನುಡಿಯ ನಾಯಕ, ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾವಪೂರ್ಣ ಶ್ರದ್ದಾಂಜಲಿ ಎಂದು ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿದ್ದಾರೆ.
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ನನ್ನ ಆತ್ಮೀಯ ಸಹೋದರರು, ಸಂಪುಟ ಸಹೋದ್ಯೋಗಿ ಹಾಗೂ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಕೊಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಚಿವರಾದ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದಾರೆ.
ಕರ್ನಾಟಕ ಸರ್ಕಾರದ ಅರಣ್ಯ ಸಚಿವರು ಹಾಗೂ ಆತ್ಮೀಯರಾಗಿದ್ದ ಶ್ರೀ ಉಮೇಶ ಕತ್ತಿಯವರು ಹೃದಯಘಾತದಿಂದ ನಿಧನರಾಗಿರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ, ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂಸದ ಉಮೇಶ್ ಜಾಧವ್ ಟ್ವೀಟ್ ಮಾಡಿದ್ದಾರೆ.
ಉಮೇಶ ಕತ್ತಿಯವರು ಹೃದಯಘಾತದಿಂದ ನಿಧನರಾಗಿರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ, ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯಸರ್ಕಾರದ ಹಿರಿಯ ಸಚಿವರು, ನನ್ನ ಆಪ್ತರಾದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲೆಂದು ಪ್ರಾರ್ಥನೆ. ಎಂದು ಮಾಜಿ ಕೇಂದ್ರ ಸಚಿವ, ಸಂಸದ ಸದಾನಂದ ಗೌಡ ಅವರು ಟ್ವೀಟ್ ಮಾಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ