ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 25ರಂದು ಅಂತರಿಕ್ಷ ಗಗನಯಾನಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜೆಎನ್‌ಪಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರಾದ ಎನ್.ಎಸ್ ಭೋಸರಾಜು ಅವರು ಸಭೆ ನಡೆಸಿ ಮಾತನಾಡಿದರು. ಬಳಿಕ ಮಾತನಾಡಿದ ಅವರು, ಜೆಎನ್‌ಪಿ ಸಹಯೋಗದಲ್ಲಿ ಜವಾಹರಲಾಲ್ ನೆಹರು ಪ್ಲಾನೆಟೇರಿಯಂನ ಯು.ಆರ್.ರಾವ್ ಭವನದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಗಗನಯಾನಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಎಲ್ಲಾ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮವು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಗನಯಾತ್ರಿಯೊಂದಿಗೆ ನೇರವಾಗಿ ಸಂವಹನ ನಡೆಸಲು ಅಪರೂಪದ ಅವಕಾಶವನ್ನು ಒದಗಿಸುತ್ತದೆ.ರಾಜ್ಯದ ಇನ್ನಿತರೆ ಭಾಗಗಳ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

