ಹೊಸದಿಗಂತ ವರದಿ, ಕಾರವಾರ:
ಮುಂಬರುವ ಒಂದೂವರೆ ತಿಂಗಳಲ್ಲಿ ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆಯಲ್ಲಿ ಉಂಟಾಗಿರುವ ಸಮಸ್ಯೆ ಬಗೆಹರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ತಿಳಿಸಿದರು.
ಕಾರವಾರದಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಆರೋಗ್ಯ ಕವಚ 108 ಆಂಬ್ಯುಲೆನ್ಸ್ ಸೇವೆ ಯಲ್ಲಿ ಸಮಸ್ಯೆಗಳಿಗೆ ತಾಂತ್ರಿಕ ತೊಂದರೆ ಜೊತೆಯಲ್ಲಿ ಸಿಬ್ಬಂದಿಗಳ ಕೊರತೆಯಂತ ಕಾರಣಗಳಿದ್ದು ಇದೀಗ ನಿರ್ವಹಣೆಯ ಹೊಣೆ ವಹಿಸಿಕೊಂಡಿರುವ ಸಂಸ್ಥೆ ಸರಿಯಾಗಿ ಸೇವೆ ನೀಡುತ್ತಿಲ್ಲ ಕೆಲವೇ ದಿನಗಳಲ್ಲಿ ಸಮಸ್ಯೆ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಜನರ ಬಹು ಕಾಲದ ಬೇಡಿಕೆ ಆಗಿರುವ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಸುಧಾಕರ ಅವರು ಕುಮಟಾ ತಾಲೂಕಿನ ಮಿರ್ಜಾನ , ಎತ್ತಿನಬೈಲ್ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಎಲ್ಲಾ ಸೌಕರ್ಯಗಳನ್ನು ಹೊಂದಿರುವ ಅತ್ಯಾಧುನಿಕ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಸ್ಥಳವನ್ನು ಅಂತಿಮಗೊಳಿಸಿ ಶೀಘ್ರದಲ್ಲಿ ನಿರ್ಮಾಣ ಕಾಮಗಾರಿಯನ್ನು ಆರಂಭಿಸುವುದಾಗಿ ಸಚಿವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕಿ ರೂಪಾಲಿ ನಾಯ್ಕ ಉಪಸ್ಥಿತರಿದ್ದರು.