ಹೊಸದಿಗಂತ ವರದಿ,ಕುಷ್ಟಗಿ:
ಸ್ವಾತಂತ್ರ್ಯ ಬಂದಾಗಿನಿಂದ ಸರ್ಕಾರದ ಖಜಾನೆಯನ್ನು ಕಾಂಗ್ರೆಸ್ ನ ನಾಯಕರು ಹಗಲು ದರೋಡೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.
ನಗರದಲ್ಲಿ ಬುಧವಾರ ಬಿಜೆಪಿ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ದಶಕಗಳಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರದ ಬೊಕ್ಕಸವನ್ನು ದೋಚಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಸಚಿವ ರಮೇಶ್ ಕುಮಾರ್, ಮೂರು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ನಿಂದ ಇದು ಸಾಧ್ಯವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ಯಾವ ಕಾಂಗ್ರೆಸ್ಗರೂ ವಿರೋಧಿಸಲಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಬಿಜೆಪಿ ದೇಶದಲ್ಲಿ ಬೆಳೆಯುತ್ತಿದೆ. ಕಾಂಗ್ರೆಸ್ ಎರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದೆ. ಹಣದ ಬಲ, ಜಾತಿ ಬಲದಿಂದ ಗೆಲ್ಲುತ್ತೇವೆ ಎನ್ನುವ ಕಾಂಗ್ರೆಸ್ ಗೆ ಪಾಠ ಕಲಿಸಬೇಕಿದೆ. ಸಿದ್ದು- ಡಿಕೆಶಿ ಜೋಡಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ 150 ಕ್ಕೂ ಅಧಿಕ ಸ್ಥಾನದಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.