ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕೈಗಾರಿಕಾ ಭೂಪಟವನ್ನೇ ಬದಲಾಯಿಸಬಲ್ಲ ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಸ್ತಾಪಿಸಿದ್ದ ರಾಜ್ಯದ ಒಂಬತ್ತು ಪ್ರಮುಖ ಜಿಲ್ಲೆಗಳನ್ನು ಒಳಗೊಂಡ ‘ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ’ಕ್ಕೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಮ್ಮತಿ ಸೂಚಿಸಿದ್ದಾರೆ.
ನವೆಂಬರ್ 13 ರಂದು ಸಚಿವ ಗೋಯಲ್ ಅವರನ್ನು ಭೇಟಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಒಂಬತ್ತು ಪ್ರತ್ಯೇಕ ಕೈಗಾರಿಕಾ ಪಾರ್ಕ್‌ಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ನ ಚೌಕಟ್ಟಿನಡಿಯಲ್ಲಿ ಸ್ಥಾಪಿಸುವಂತೆ ಮನವಿ ಮಾಡಿದ್ದರು.
ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಒತ್ತು:
ಕುಮಾರಸ್ವಾಮಿ ಅವರ ಈ ಪ್ರಸ್ತಾವನೆಯನ್ನು ಶ್ಲಾಘಿಸಿರುವ ಕೇಂದ್ರ ಸಚಿವ ಗೋಯಲ್, ಇದು ರಾಜ್ಯದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಅತ್ಯಂತ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಬಣ್ಣಿಸಿದ್ದಾರೆ. ಈ ಕುರಿತು ಹೆಚ್‌ಡಿಕೆ ಅವರಿಗೆ ಪತ್ರ ಬರೆದಿರುವ ಗೋಯಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸುವ ಕೇಂದ್ರದ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಇದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
ಈ ಬೃಹತ್ ಯೋಜನೆಯು ಸಾಗಾಣಿಕೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಮತ್ತು ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡಲಿದೆ. ಈ ಕೈಗಾರಿಕಾ ಪಾರ್ಕ್‌ಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವುದರಿಂದ, ಸರಕು ಹಾಗೂ ಕೈಗಾರಿಕಾ ಉತ್ಪನ್ನಗಳ ಸಾಗಣೆ ಸುಗಮವಾಗಿ ಕೈಗಾರಿಕಾಭಿವೃದ್ಧಿ ವೇಗ ಪಡೆದುಕೊಳ್ಳಲಿದೆ. ಅಲ್ಲದೆ, ಖಾಸಗಿ ಬಂಡವಾಳ ಹೂಡಿಕೆಯಲ್ಲಿಯೂ ಗಣನೀಯ ಪ್ರಗತಿ ಸಾಧಿಸಲು ಇದು ಸಹಕಾರಿಯಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

