Wednesday, November 26, 2025

ನಾಯಕತ್ವ ಬದಲಾವಣೆ ಐದಾರು ಜನರ ನಡುವಿನ ಗುಟ್ಟಿನ ವಿಚಾರ: ಡಿಸಿಎಂ ಡಿಕೆ ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾಯಕತ್ವ ಬದಲಾವಣೆ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ನಾನು ಬಹಿರಂಗ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಇಂದು ಖರ್ಗೆ ಹಾಗೂ ರಾಹುಲ್ ಗಾಂಧಿ ಚರ್ಚೆ ವಿಚಾರವಾಗಿ ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರು ಚರ್ಚೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಅವರು ನನಗೆ ಈ ಬಗ್ಗೆ ಹೇಳಿಲ್ಲ. ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು ಇಬ್ಬರು.

ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು. ಸಿಎಂ ಸಿದ್ದರಾಮಯ್ಯ ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ, ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು ಎಂದರು.

ಇನ್ನೂ ಡಿಕೆಶಿ ಸಿಎಂ ಆಗಬೇಕು ಎಂದು ಅಭಿಮಾನಿಗಳು ಪೂಜೆ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಅವಧಿಯಲ್ಲಿ ನಾನು ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರು. ನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳು ಬಂದರು, ಕೆಲವರು ಬರಲಿಲ್ಲ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬೇರೆ ಹೇಳಿಕೆ ಕೊಟ್ಟರು. ಅನೇಕರು ನಮ್ಮ ಮನೆಗೆ ಬಂದು ನನ್ನ ಪತ್ನಿ ಹಾಗೂ ಮಕ್ಕಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದರು. ಅಂದು ಜನ ಹರಕೆ ಹೊತ್ತು ಪ್ರಾರ್ಥಿಸಿದ್ದರು. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು ನನಗೆ ಬಹಳ ವಿಶೇಷ ಎಂದು ನುಡಿದರು.

error: Content is protected !!