ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಕ್ರಿಕೆಟ್ ವೇದಿಕೆಯಲ್ಲಿ ಬ್ಯಾಟ್ಸ್‌ಮನ್‌ಗಳ ಪೈಪೋಟಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಇದೀಗ ಐಸಿಸಿ ಏಕದಿನ ಬ್ಯಾಟರ್‌ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ.
ಕಳೆದ ಬಾರಿ ಅಗ್ರಸ್ಥಾನದಲ್ಲಿದ್ದ ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ ಈ ಬಾರಿ ಒಂದು ಸ್ಥಾನ ಕುಸಿದು ಎರಡನೇ ಸ್ಥಾನಕ್ಕೆ ಜಾರಿದ್ದಾರೆ.
ರೋಹಿತ್ ಶರ್ಮಾ 781 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಸೌತ್ ಆಫ್ರಿಕಾ ವಿರುದ್ಧದ ಮುಂದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಶ್ರೇಯಾಂಕವನ್ನು ಮತ್ತಷ್ಟು ಬಲಪಡಿಸುವ ಸಾಧ್ಯತೆ ಇದೆ. ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಲ್ಲಿ ಉತ್ತಮವಾಗಿ ಆಡಿದ್ದರೂ, ಇತ್ತೀಚಿನ ಪಂದ್ಯಗಳಿಂದ ಹೊರಗುಳಿದ ಕಾರಣ ಡೇರಿಲ್ ಮಿಚೆಲ್ 15 ಅಂಕಗಳ ನಷ್ಟದೊಂದಿಗೆ 766 ಅಂಕಗಳಿಗೆ ಕುಸಿದು ದ್ವಿತೀಯ ಸ್ಥಾನದಲ್ಲಿದ್ದಾರೆ.
ಮೂರನೇ ಸ್ಥಾನವನ್ನು ಅಫ್ಘಾನಿಸ್ತಾನದ ಯುವ ಬ್ಯಾಟರ್ ಇಬ್ರಾಹಿಂ ಝದ್ರಾನ್ ಅಲಂಕರಿಸಿದ್ದು, ಬಾಂಗ್ಲಾದೇಶ ವಿರುದ್ಧದ ಸರಣಿಯ ಅದ್ಭುತ ಪ್ರದರ್ಶನದಿಂದ 764 ಅಂಕಗಳೊಂದಿಗೆ ಟಾಪ್–3ಕ್ಕೆ ಜಿಗಿದಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಭಾರತದ ನಾಯಕ ಶುಭ್‌ಮನ್ ಗಿಲ್ ಇದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಕಾರಣ 745 ಅಂಕಗಳಿಗೆ ಇಳಿಕೆಯಾಗಿದ್ದಾರೆ. ಐದನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ 725 ಅಂಕಗಳೊಂದಿಗೆ ಸ್ಥಾನ ಪಡೆದಿದ್ದಾರೆ. ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೂರು ಭಾರತೀಯ ಆಟಗಾರರು ಟಾಪ್–5ರಲ್ಲಿ ಸ್ಥಾನ ಪಡೆದಿರುವುದು ಭಾರತೀಯ ಕ್ರಿಕೆಟ್‌ಗೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.

