March 3, 2026
Tuesday, March 3, 2026
spot_img

ಬುದ್ಧಿವಾದ ಹೇಳಿದ್ದೇ ತಪ್ಪಾಯಿತೇ? ಒಂದೇ ಮಾತಿಗೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲೇಜು ಬಿಡದೆ ಚೆನ್ನಾಗಿ ಓದಬೇಕು ಮತ್ತು ಎಲ್ಲೆಂದರಲ್ಲಿ ಪ್ರವಾಸ ಹೋಗಬಾರದು ಎಂದು ಮನೆಯವರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಗದಗ ನಗರದ ಭೀಷ್ಮ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ದುಃಖಕರ ಘಟನೆ ನಡೆದಿದೆ.

ಚಂದ್ರಿಕಾ (21) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಗದಗ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಬಾಗಲಕೋಟೆ ಜಿಲ್ಲೆಯ ಶಿರೂರು ಗ್ರಾಮದವರಾದ ಚಂದ್ರಿಕಾ, ನಗರದ ಲಕ್ಷ್ಮೀ ನಗರದಲ್ಲಿ ಬಾಡಿಗೆ ಮನೆಯಲ್ಲಿ ತಮ್ಮ ಗೆಳತಿಯರೊಂದಿಗೆ ವಾಸವಾಗಿದ್ದರು.

ಇತ್ತೀಚೆಗೆ ಚಂದ್ರಿಕಾ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದರು. ಈ ವಿಷಯ ಮನೆಯವರಿಗೆ ತಿಳಿದಾಗ, ಅವರು ಚಂದ್ರಿಕಾಗೆ ಓದು ಬಿಟ್ಟು ಪ್ರವಾಸ ಹೋಗಿದ್ದಕ್ಕೆ ತೀವ್ರವಾಗಿ ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ. ಇದರಿಂದ ತೀವ್ರವಾಗಿ ಮನನೊಂದ ಚಂದ್ರಿಕಾ ಅವರು, ಶನಿವಾರ ರಾತ್ರಿ ಸುಮಾರು 1:30 ರ ಸುಮಾರಿಗೆ ತಮ್ಮ ಕೊಠಡಿಯಿಂದ ಹೊರಹೋಗಿ, ನಗರದ ಹೃದಯ ಭಾಗದಲ್ಲಿರುವ ಭೀಷ್ಮ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಗದಗ ಶಹರ ಪೊಲೀಸ್ ಠಾಣೆಯ ಸಿಪಿಐ ಎಲ್.ಕೆ ಜೂಲಕಟ್ಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ತಮ್ಮ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !