ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾಲೇಜಿಗೆ ತೆರಳುತ್ತಿದ್ದ ಎಲ್‌ಎಲ್‌ಬಿ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಮೃತರ ಜೊತೆಗಿದ್ದ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೇಲೂರು ತಾಲ್ಲೂಕಿನ ಹಿರಿಅಸಡೆ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಈ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು ಚಂದನ್ (22) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಮೃತ ಚಂದನ್ ಅವರು ತಮ್ಮ ಪಕ್ಕದ ಮನೆಯ ಯುವಕ ಭರತ್ ಅವರೊಂದಿಗೆ ಬೈಕ್‌ನಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ಅದೇ ವೇಳೆ, ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಜೀಪ್‌ಗೆ ಅವರ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂ ಆಗಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಚಂದನ್ ಕೊನೆಯುಸಿರೆಳೆದಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಭರತ್ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಮುಂದುವರಿದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅರೇಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

