ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಶಾಲೆಗೆ ವರ್ಗಾವಣೆಯಾದ ವಿದ್ಯಾರ್ಥಿಯು 15 ದಿನಗಳ ಒಳಗೆ ವರ್ಗಾವಣೆ ಪ್ರಮಾಣ ಪತ್ರ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದ ಮೇರೆಗೆ ಎಲ್ಲಾ ಶಾಲೆಗಳಿಗೆ ವರ್ಗಾವಣೆ ಪ್ರಮಾಣ ಪತ್ರಕ್ಕಾಗಿ ಅರ್ಜಿಗಳನ್ನು ಸ್ವೀಕರಿಸಿದ 15 ದಿನಗಳೊಳಗೆ ವರ್ಗಾವಣೆ ಪ್ರಮಾಣ ಪತ್ರಗಳನ್ನು ನೀಡುವಂತೆ ಶಿಕ್ಷಣ ಇಲಾಖೆಯು ಆದೇಶಿಸಿದೆ. ಒಂದು ವೇಳೆ ಇದಕ್ಕೆ ತಪ್ಪಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣೆ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದು, ಶೈಕ್ಷಣಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳು ವಂಚಿತರಾಗದಂತೆ ತಡೆಯುವ ಸಲುವಾಗಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ರ ಸೆಕ್ಷನ್ 5(1) ಅಡಿಯಲ್ಲಿ ಶಾಲೆಯಿಂದ ಹೊರ ಹೋಗುವ ವಿದ್ಯಾರ್ಥಿಗಳಿಗೆ 15 ದಿನಗಳೊಳಗೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು. ಇದು ಶಾಲಾ ಪ್ರಾಂಶುಪಾಲರ ಮೊದಲ ಕರ್ತವ್ಯವಾಗಿದೆ.
ಒಂದು ವೇಳೆ ಶಾಲಾ ಪ್ರಾಂಶುಪಾಲರು ಸಮಯಕ್ಕೆ ವರ್ಗಾವಣೆ ಪತ್ರವನ್ನು ನೀಡದಿದ್ದರೆ ಪೋಷಕರು ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಬಹುದು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚನೆ ಬಳಿಕ ಒಂದು ವಾರದೊಳಗೆ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರವನ್ನು ಪ್ರಾಂಶುಪಾಲರು ನೀಡಲೇಬೇಕು. ಇಲ್ಲವಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರಗಳನ್ನು ನೀಡಲು ವಿಳಂಬ ಮಾಡುತ್ತಿರುವ ಬಗ್ಗೆ ಪೋಷಕರಿಂದ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಆದೇಶವನ್ನು ಹೊರಡಿಸಿದೆ.
ಖಾಸಗಿ ಶಾಲೆಗಳ ಶುಲ್ಕ ಭರಿಸಲಾಗದ ಅನೇಕ ವಿದ್ಯಾರ್ಥಿಗಳು 2021- 22ರಲ್ಲಿ ಸರ್ಕಾರಿ ಶಾಲೆಗಳಿಗೆ ವರ್ಗಾವಣೆಗೊಂಡಿದ್ದಾರೆ. ಆ ಸಂದರ್ಭದಲ್ಲಿ ಕೆಲವು ಖಾಸಗಿ ಶಾಲೆಗಳು ವರ್ಗಾವಣೆ ಪ್ರಮಾಣ ಪತ್ರಗಳನ್ನು ನೀಡದೆ ಪೋಷಕರು, ವಿದ್ಯಾರ್ಥಿಗಳಿಗೆ ತೊಂದರೆಯನ್ನು ಉಂಟು ಮಾಡಿದ್ದವು. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಶುಲ್ಕವನ್ನು ನಿಯಂತ್ರಿಸಲು ಮತ್ತು ಸಮಯಕ್ಕೆ ಸರಿಯಾಗಿ ವರ್ಗಾವಣೆ ಪ್ರಮಾಣಪತ್ರಗಳನ್ನು ನೀಡುವುದನ್ನು ಖಚಿತ ಪಡಿಸಲು ಕರ್ನಾಟಕ ಹೈಕೋರ್ಟ್ ಸಮಿತಿಗಳನ್ನು ರಚಿಸುವಂತೆ ಸರ್ಕಾರಕ್ಕೆ ಆದೇಶವನ್ನು ನೀಡಿತ್ತು.

