ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೊಸ ವರ್ಷಾಚರಣೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇದರ ನಡುವೆ ಭಯೋತ್ಪಾದನಾ ಚಟುವಟಿಕೆ ನಡೆಯುವ ಶಂಕೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಯಮತ್ತೂರು ಮತ್ತು ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ ನಮ್ಮ ಕಣ್ಣ ಮುಂದೆ ಇರುವುದರಿಂದ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇರುವುದರಿಂದ ಪೊಲೀಸರು ಬಹಳ ಎಚ್ಚರಿಕೆಯಂದ ಇರುವಂತೆ ಸೂಚಿಸಲಾಗಿದೆ.
ಹೊಟೇಲ್, ಬಾರ್ ಹಾಗೂ ಪಬ್ಗಳಿಗೆ ನಾವು ಸುರಕ್ಷೆಗೆ ಸಂಬಂಧಿಸಿದ ಸೂಚನೆಗಳನ್ನು ನೀಡಲಾಗಿದೆ. ಎಲ್ಲರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೆಲ ಹೋಟೆಲ್ಗಳು ನಿಯಮ ಉಲ್ಲಂಘಿಸಿದ ಘಟನೆಗಳು ಬೆಳಕಿಗೆ ಬಂದಿದ್ದು ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿದ್ದೇವೆ. ಅವಧಿ ಮೀರಿ ವಹಿವಾಟು ನಡೆಸುತ್ತಿದ್ದರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.