ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ಶೋಷಣೆ ಆರೋಪಕ್ಕೆ ಸಂಬಂಧಿಸಿ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ.
2013ರ ಜುಲೈ 19 ರಂದು ಮಹಿಳೆಯೋರ್ವರು ತಿರುವನಂತಪುರದ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದು ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಕೆಲವು ಸಚಿವರು ಮತ್ತು ಇಬ್ಬರು ಮಾಜಿ ಕೇಂದ್ರ ಸಚಿವರು ಸೇರಿದಂತೆ ಕಾಂಗ್ರೆಸ್ ಮತ್ತು ಯುಡಿಎಫ್‌ನ ಹಲವು ನಾಯಕರ ಮೇಲೆ ಲೈಂಗಿಕ ಶೋಷಣೆ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಚಾಂಡಿ ಅವರಿಗೆ ಕ್ಲೀನ್ ಚಿಟ್ ನೀಡಿದೆ.
ಈ ಹಿಂದೆ ಯುಡಿಎಫ್ ಸರ್ಕಾರ ಆಡಳಿತದಲ್ಲಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಹು ಕೋಟಿ ಸೋಲಾರ್ ಪ್ಯಾನಲ್ ಹಗರಣದಲ್ಲಿ ಆರೋಪಿಯಾಗಿದ್ದ ಮಹಿಳೆಯೋರ್ವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಚಾಂಡಿ ಸಹಿತ ಆರು ಮಂದಿಯ ವಿರುದ್ಧ ಕೇರಳ ಪೊಲೀಸರ ಅಪರಾಧ ವಿಭಾಗವು ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ 2021ರಲ್ಲಿ ಆಡಳಿತ ನಡೆಸಿದ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರ ಉಮ್ಮನ್ ಚಾಂಡಿ, ಮಾಜಿ ಕೇಂದ್ರ ಸಚಿವ ಕೆ.ಸಿ. ವೇಣುಗೋಪಾಲ್ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು.