February 26, 2026
Thursday, February 26, 2026
spot_img

ಕರಾವಳಿ, ದಕ್ಷಿಣ ಒಳನಾಡಿಗೆ ನಾಳೆಯೂ ಮಳೆ ಭಾಗ್ಯ: ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂದಿನ ದಿನವೂ ಮಳೆಯ ವಾತಾವರಣ ಮುಂದುವರಿಯಲಿದ್ದು, ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಹಾಗೆಯೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿರುವ ನಾಗರಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಉಳಿದಂತೆ, ಉತ್ತರ ಒಳನಾಡು ಭಾಗದಲ್ಲಿ ಸಂಪೂರ್ಣವಾಗಿ ಒಣ ಹವೆ ಮುಂದುವರಿಯಲಿದ್ದು, ಇಲ್ಲಿ ಯಾವುದೇ ಮಳೆಯ ಸಾಧ್ಯತೆ ಇರುವುದಿಲ್ಲ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದೇ ರೀತಿ, ದಕ್ಷಿಣ ಒಳನಾಡು ಭಾಗದ ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣವನ್ನು ಕಾಣಬಹುದು.

ರಾಜಧಾನಿ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇರುವ ಸಾಧ್ಯತೆ ಇದೆ. ಅಲ್ಲದೆ, ನಗರದ ಕೆಲವು ಪ್ರದೇಶಗಳಲ್ಲಿ ಮುಂಜಾನೆ ವೇಳೆ ಮಂಜು ಮುಸುಕಿದ ವಾತಾವರಣ ಇರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !