ಕೊಡಗಿನಲ್ಲಿ ಔಷಧೀಯ ಸಸ್ಯಗಳ ಉದ್ಯಾನ: ಜೀವವೈವಿಧ್ಯ ಮಂಡಳಿ ಅನುಮೋದನೆ

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣಕ್ಕೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಮುಂದಾಗಿದ್ದು, ಮಂಡಳಿಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮಂಡಳಿಯ ತ್ರೈಮಾಸಿಕ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಯಿತು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂಡಳಿ ಕಚೇರಿ ವನವಿಕಾಸ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪ್ರಗತಿ ಬಗ್ಗೆ ಅಧ್ಯಕ್ಷರು ಮಾಹಿತಿ ಪಡೆದುಕೊಂಡರು.
ಆರ್ಥಿಕ ವರ್ಷಾಂತ್ಯದವರೆಗೆ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮುಂದಿನ ಆರ್ಥಿಕ ವರ್ಷದಲ್ಲಿ ಹೆಚ್ಚಿನ ಅನುದಾನಕ್ಕಾಗಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿ, ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಮಂಡಳಿ ಸದಸ್ಯರು ಸಲಹೆ ನೀಡಿದರು.
ಸನ್ಮಾನ : ಸಭೆ ಆರಂಭಕ್ಕೂ ಮುನ್ನ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರಾಧಾದೇವಿ ಅವರನ್ನು ಸನ್ಮಾನಿಸಲಾಯಿತು.
ಮಂಡಳಿಯ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡಿದ್ದಕ್ಕಾಗಿ ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತಾ ಎಸ್. ಅರೆಕಲ್, ಸದಸ್ಯರಾದ ಉತ್ತರ ಕನ್ನಡದ ಪ್ರಕಾಶ್ ಮೇಸ್ತಾ, ಶಿವಮೊಗ್ಗದ ವೆಂಕಟೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿಜಯ್ ಮೋಹನ್ ರಾಜ್, ಅರಣ್ಯ ಇಲಾಖೆ ಪಿಸಿಸಿಎಫ್ ಎ.ಕೆ. ಸಿಂಗ್ ಹಾಗೂ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!