ಅರಣ್ಯ ಹಕ್ಕು ಸಮಿತಿ ಸಭೆ: ದಾಖಲೆ ಒದಗಿಸಲು ಶಾಸಕ ಅಪ್ಪಚ್ಚುರಂಜನ್ ಸೂಚನೆ

ಹೊಸ ದಿಗಂತ ವರದಿ, ಸೋಮವಾರಪೇಟೆ:

ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ ನಡೆಯಿತು.
ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್ ಅವರು, ಫಲಾನುಭವಿಗಳು ತಮ್ಮ ಜಾಗಕ್ಕೆ ಸಂಬಂಧಿಸಿದಂತೆ ಈವರೆಗೆ ಪಡೆದುಕೊಂಡಿರುವ ದಾಖಲೆಗಳು, ಆಧಾರ್‍ ಕಾರ್ಡ್,
ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯೊಳಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಬೇಕೆಂದು ಸೂಚಿಸಿದರು.
ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುವ ಸಂದರ್ಭ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಅಕ್ರಮ ಸಕ್ರಮ ಸಮಿತಿ, 94 ಸಿ ಮತ್ತು 94 ಸಿ.ಸಿ., ಅರಣ್ಯ ಹಕ್ಕು ಸಮಿತಿ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಮಾತನಾಡಿ, ಫಲಾನುಭವಿಗಳು ಸಮಿತಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ನಂತರ ಅರಣ್ಯ ಇಲಾಖೆ ಮತ್ತು ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆಸಲಾಗುವುದು. ವರದಿಯನ್ನು ಉಪ ವಿಭಾಗಾಧಿಕಾರಿಗಳಿಗೆ ಸಲ್ಲಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಮಾಹಿತಿಯಿತ್ತರು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಹಕ್ಕು ಸಮಿತಿ ಅಧ್ಯಕ್ಷೆ ಕಮಲಾ ಸುರೇಶ್ ವಹಿಸಿದ್ದರು. ವೇದಿಕೆಯಲ್ಲಿ ಅರಣ್ಯಾಧಿಕಾರಿ ಚೇತನ್, ಡಿಆರ್‍ಎಫ್‍ಓ ನಾರಾಯಣ ಮೂಲ್ಯ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಚಂದ್ರಪ್ಪ, ಗ್ರಾ.ಪಂ. ಅಧ್ಯಕ್ಷೆ ಪುಷ್ಪಾ, ಉಪಾಧ್ಯಕ್ಷ ಟಿ.ಆರ್. ಪ್ರವೀಣ್, ಪ್ರಮುಖರಾದ ವಿ.ಎಂ. ವಿಜಯ, ಹೆಚ್.ಸಿ. ರಾಮಕೃಷ್ಣ, ಗ್ರಾಮ ಲೆಕ್ಕಿಗರಾದ ಶ್ವೇತಾ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಯಿಷಾ, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!