ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಚುನಾವಣಾ ಅಕ್ರಮ ಆರೋಪ ಸಂಬಂಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಇಂದು ನೊಟೀಸ್ ನೀಡಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ. ಶಂಕರ್ ಎನ್ನುವವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿರುವ ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿ ಸದಸ್ಯ ಪೀಠ, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.
2023ರ ಚುನಾವಣೆಯಲ್ಲಿ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷ ನೀಡಿ ಸಿದ್ದರಾಮಯ್ಯ ಗೆದ್ದಿದ್ದಾರೆ. ಆಮಿಷಗಳ ಮೂಲಕ ಮತದಾರರನ್ನು ತಮ್ಮೆಡೆಗೆ ಸೆಳೆಯುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ. ಶಂಕರ್ ಆಗ್ರಹಿಸಿದ್ದರು.
ಇದೇ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲು ಕೂಡ ಏರಿದ್ದರು. ಆದರೆ ಸಿದ್ದರಾಮಯ್ಯ ಅವರ ಪರವಾಗಿ ವಾದಿಸಿಸದ್ದ ಹಿರಿಯ ವಕೀಲ ರವಿವರ್ಮ ಕುಮಾರ್, ಶಂಕರ್ ಅವರ ಆರೋಪಗಳಿಗೆ ಕೌಂಟರ್ ಕೊಟ್ಟಿದ್ದರು. ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಶಂಕರ್ ಅವರ ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

