Friday, December 12, 2025

KSCAಗೆ ಹೊಸ ನಾಯಕತ್ವ | ಕ್ರಿಕೆಟ್ ಅಭಿಮಾನಿಗಳಿಗೆ ಶೀಘ್ರದಲ್ಲಿ ಸಿಹಿಸುದ್ದಿ ಸಿಗುತ್ತೆ: ವೆಂಕಟೇಶ್ ಪ್ರಸಾದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ರಾಜ್ಯ ಕ್ರಿಕೆಟ್ ರಾಜಕಾರಣದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಕೆಎಸ್‌ಸಿಎ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ನೇತೃತ್ವದ ಬಣ ಸ್ಪಷ್ಟ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಬೆಂಬಲಿತ ತಂಡದ ಸಹಕಾರದಿಂದ ಜಯಭೇರಿ ಬಾರಿಸಿರುವ ವೆಂಕಟೇಶ್ ಪ್ರಸಾದ್, ಕೆಎಸ್‌ಸಿಎ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಬಳಿಕ ಮಾತನಾಡಿರುವ ವೆಂಕಟೇಶ್ ಪ್ರಸಾದ್, ಬೆಂಗಳೂರು ಹಾಗೂ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ. ವಿಶೇಷವಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಪಂದ್ಯಗಳನ್ನೂ ಮತ್ತೆ ಆಯೋಜಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಸಂಬಂಧವಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಸ್ಟೇಡಿಯಂನಲ್ಲಿ ಎಲ್ಲಾ ಪಂದ್ಯಗಳಿಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ದೊರೆತಿದೆ. ಹೀಗಾಗಿ ಎಲ್ಲಾ ಕ್ರಿಕೆಟ್ ಅಭಿಮಾನಿಗಳಿಗೆ ಶೀಘ್ರದಲ್ಲಿ ಸಿಹಿಸುದ್ದಿ ಸಿಗುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ 2010ರಿಂದ 2013ರವರೆಗೆ ಕೆಎಸ್‌ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ವೆಂಕಟೇಶ್ ಪ್ರಸಾದ್, ಮೂರು ದಶಕಗಳ ಕ್ರಿಕೆಟ್ ಅನುಭವದೊಂದಿಗೆ ಸಂಸ್ಥೆಗೆ ಮರಳಿದ್ದಾರೆ. ಭಾರತ ಪರ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ಯಶಸ್ವಿ ವಿಕೆಟ್‌ ಬೇಟೆಗಾರನಾಗಿದ್ದ ‘ವೆಂಕಿ’, ಇದೀಗ ಆಡಳಿತದಲ್ಲೂ ಹೊಸ ಉತ್ಸಾಹ ತುಂಬುವ ನಿರೀಕ್ಷೆ ಮೂಡಿಸಿದ್ದಾರೆ.

error: Content is protected !!