ಹೊಸದಿಗಂತ ಡಿಜಿಟಲ್ ಡೆಸ್ಕ್ :
ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 203 ರನ್ ಬಾರಿಸಿದ್ದು, ಹೈದರಾಬಾದ್ ತಂಡಕ್ಕೆ ಸವಾಲಿನ ಗುರಿ ನೀಡಿದೆ.
ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ರಾಜಸ್ಥಾನ ತಂಡಕ್ಕೆ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿಕೊಟ್ಟರು.
ಮೊದಲ 6 ಓವರ್‌ನಲ್ಲೇ ಈ ಜೋಡಿ 85 ರನ್ ಜತೆಯಾಟವಾಡಿದರು. ಕೇವಲ 22 ಎಸೆತಗಳಲ್ಲಿ ಬಟ್ಲರ್-ಜೈಸ್ವಾಲ್ ಜೋಡಿ 50 ರನ್‌ಗಳ ಜತೆಯಾಟವಾಡಿತು. ಜೋಸ್ ಬಟ್ಲರ್ ಕೇವಲ 22 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 54 ರನ್ ಬಾರಿಸಿ ಫಜಲ್‌ಹಕ್ ಫಾರೂಕಿಗೆ ವಿಕೆಟ್ ಒಪ್ಪಿಸಿದರು.
ಇನ್ನು ಜೋಸ್ ಬಟ್ಲರ್‌ಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ನೀಡಿದ ಮತ್ತೋರ್ವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಕೂಡಾ ಆಕರ್ಷಕ ಅರ್ಧಶತಕ ಸಿಡಿಸಿದರು. ಜೈಸ್ವಾಲ್ 37 ಎಸೆತಗಳನ್ನು ಎದುರಿಸಿ 9 ಬೌಂಡರಿ ಸಹಿತ 54 ರನ್ ಬಾರಿಸಿ ಫಜಲ್‌ಹಕ್ ಫಾರೂಕಿಗೆ ಎರಡನೇ ಬಲಿಯಾದರು.
ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್(2) ಹಾಗೂ ರಿಯಾನ್ ಪರಾಗ್(7) ಹೆಚ್ಚುಹೊತ್ತು ಕ್ರೀಸ್‌ನಲ್ಲಿರಲು ಸನ್‌ರೈಸರ್ಸ್ ಹೈದರಾಬಾದ್ ಬೌಲರ್‌ಗಳು ಅವಕಾಶ ನೀಡಲಿಲ್ಲ.
ಸಂಜು ಸ್ಯಾಮ್ಸನ್, ಇದೀಗ ತಾವಾಡಿದ ಮೊದಲ ಐಪಿಎಲ್ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ಗಮನ ಸೆಳೆದರು. ಸಂಜು ಸ್ಯಾಮ್ಸನ್ 32 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 55 ರನ್ ಬಾರಿಸಿ ಟಿ ನಟರಾಜನ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಕೊನೆಯಲ್ಲಿ ಶಿಮ್ರಾನ್ ಹೆಟ್ಮೇಯರ್ ಅಜೇಯ 22 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.