ಹೊಸದಿಗಂತ ವರದಿ, ಮಡಿಕೇರಿ:
ಮಡಿಕೇರಿ ಕೆಎಸ್ ಆರ್.ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಆರು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಸಂಪಾಜೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಭೀಕರ ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸುಳ್ಯದಿಂದ ವೀರಾಜಪೇಟೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಸಂಪಾಜೆಯ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಮಕ್ಕಳ ಸಹಿತ ಒಟ್ಟು ಏಂಟು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಮಕ್ಕಳು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಗಂಭೀರ ಸ್ವರೂಪದ ಗಾಯಗಳಾಗಿದ್ದವರನ್ನು ಸುಳ್ಯ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ನಾಲ್ವರು ಅಸುನೀಗಿರುವುದಾಗಿ ಹೇಳಲಾಗಿದೆ.
ಸಾವಿಗೀಡಾದವರು ಮಂಡ್ಯ ಜಿಲ್ಲೆಯವರೆಂದು ಹೇಳಲಾಗಿದ್ದು,ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.