ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ತೀವ್ರಗೊಂಡಿದ್ದು, ಮನುಷ್ಯರು ಮತ್ತು ಸಾಕು ಪ್ರಾಣಿಗಳ ಜೀವಕ್ಕೆ ಅಪಾಯ ಎದುರಾಗಿದೆ. ಇತ್ತೀಚಿನ ಘಟನೆಯಲ್ಲಿ, ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ದುನ್ನಸಂದ್ರದಲ್ಲಿ ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿದ ದುನ್ನಸಂದ್ರದ ನಿವಾಸಿ, 50 ವರ್ಷದ ದುಂಡಮಾದ ಮೃತ ರೈತ. ಅವರು ಇಂದು ಬೆಳಗಿನ ಜಾವ ತಮ್ಮ ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ್ದಾಗ, ಏಕಾಏಕಿ ಬಂದ ಕಾಡಾನೆಯು ಅವರ ಮೇಲೆ ದಾಳಿ ಮಾಡಿದೆ. ದಾಳಿಯ ತೀವ್ರತೆಗೆ ದುಂಡಮಾದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ರೈತ ದುಂಡಮಾದ ಅವರು ತಡವಾದರೂ ಮನೆಗೆ ಮರಳದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಜಮೀನಿನ ಬಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ದುಂಡಮಾದ ಅವರ ಮೃತದೇಹ ಪತ್ತೆಯಾಗಿದೆ.
ಈ ದಾಳಿಯನ್ನು ನಡೆಸಿರುವ ಕಾಡಾನೆ ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿದೆ ಎಂದು ಹೇಳಲಾಗುತ್ತಿದ್ದು, ಇದು ಸ್ಥಳೀಯರ ಆತಂಕವನ್ನು ಹೆಚ್ಚಿಸಿದೆ. ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದರೂ ಅವುಗಳ ನಿಯಂತ್ರಣಕ್ಕೆ ಅಥವಾ ರೈತರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದುರಂತವು ಅರಣ್ಯ ಮತ್ತು ಮಾನವ ವಾಸದ ನಡುವಿನ ಸಂಘರ್ಷವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

