ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದು ಮಾಡಿದ ಹೈಕೋರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಿತ್ರದುರ್ಗದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಪಿ. ಎಸ್‌. ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಇಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್. ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ ಈ ಕುರಿತು ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ನೋಡಿಕೊಳ್ಳಲು ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್. ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ರಾಜ್ಯ ಸರ್ಕಾರದ ಈ ಕ್ರಮ ಪ್ರಶ್ನಿಸಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹಾಗೂ ಭಕ್ತರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಪೀಠವು, “ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಮಠ ಮತ್ತು ಮಠದಲ್ಲಿ ಶೈಕ್ಷಣಿಕ ಆಡಳಿತವನ್ನು ನಿರ್ವಹಣೆ ಮಾಡುವುದಕ್ಕಾಗಿ ಮಠದ ಭಕ್ತರು ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಮುಖಂಡರು ಸೂಕ್ತ ನಿರ್ಧಾರವನ್ನು ಕೈಗೊಳ್ಳಬಹುದು. ಹೀಗಾಗಿ ಮಠಕ್ಕೆ ಸರ್ಕಾರ ನೇಮಕ ಮಾಡಿರುವ ಆಡಳಿತಾಧಿಕಾರಿ ಮುಂದಿನ ನಾಲ್ಕು ವಾರಗಳ ಕಾಲ ಮುಂದುವರೆಯಬಹುದು” ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣ ಸಂಬಂಧ ಈ ಹಿಂದೆ ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ‘ಸರ್ಕಾರ ಸಂವಿಧಾನದ 162ನೇ ವಿಧಿಯಡಿ ಆಡಳಿತಾಧಿಕಾರಿ ನೇಮಕ ಮಾಡಿರುವುದು ಕಾನೂನು ಬಾಹಿರ. ಮಠಗಳ ಮೇಲೆ ನಿಯಂತ್ರಣ ಹೊಂದಲು ಕಾನೂನಿನಡಿ ಅವಕಾಶವಿಲ್ಲ. ಸಿವಿಲ್ ಪ್ರೊಸೀಜರ್ ಕೋಡ್ ಅನುಸಾರ ಕಲಂ 92ರ ಅಡಿಯಲ್ಲಿ ನಿಯಂತ್ರಣ ಹೊಂದಬಹುದು. ಆದ್ದರಿಂದ ಈ ಪ್ರಕರಣದಲ್ಲಿ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!