ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕರ್ನಾಟಕದಾದ್ಯಂತ ತನ್ನ ಜಾನಪದ ಗಾಯನದಿಂದಲೇ ಸದ್ದು ಮಾಡಿದ್ದ ‘ಮ್ಯೂಸಿಕ್ ಮೈಲಾರಿ’ ಅಲಿಯಾಸ್ ಮೈಲಾರಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮೈಲಾರಿ, ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಹಾಲಿಂಗಪುರ ಪೊಲೀಸ್ ಠಾಣೆಯ ಸಿಬ್ಬಂದಿ, ಆರೋಪಿಯನ್ನು ಸಿನಿಮೀಯ ಮಾದರಿಯಲ್ಲಿ ಬೆನ್ನಟ್ಟಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ.
ಏನಿದು ಪ್ರಕರಣ?
ಕಳೆದ ಅಕ್ಟೋಬರ್ 24ರಂದು ಚಿಕ್ಕೋಡಿ ತಾಲೂಕಿನ ಜಾಗನೂರು ಗ್ರಾಮದಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಾಡಲು ಮೈಲಾರಿ ಬಂದಿದ್ದನು. ಇದೇ ಕಾರ್ಯಕ್ರಮದಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಮಹಾಲಿಂಗಪುರ ಹೊರವಲಯದ ಲಾಡ್ಜ್ ಒಂದರಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ದೌರ್ಜನ್ಯದ ದೃಶ್ಯವನ್ನು ಚಿತ್ರೀಕರಿಸಲಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಈ ಸಂಬಂಧ ಡಿಸೆಂಬರ್ 14ರಂದು ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ ಡಿ.15 ರಂದು ಪ್ರಕರಣವನ್ನು ಮಹಾಲಿಂಗಪುರ ಠಾಣೆಗೆ ವರ್ಗಾಯಿಸಲಾಗಿದೆ. ಆರೋಪಿಗಳಾದ ಮ್ಯೂಸಿಕ್ ಮೈಲಾರಿ, ಶಂಕರ್ ಅಥಣಿ, ಸಿಂಗರ್ ದಾನವಿ, ಬೆಂಕಿ ಲತಾ, ಸಿಂಗರ್ ರುಕ್ಮಿಣಿ ಹಾಗೂ ಡಿಜೆ ಮಹಾಂತೇಶ್ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

