ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾರು ಮತ್ತು ಕಂಟೇನರ್ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸ್ವಾಮೀಜಿ ಸೇವಕರಾದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ದೇವಲವಾಡಿ ಗ್ರಾಮದ ನಿವಾಸಿ ಪಾಂಡುರಂಗ ಜಾಧವ್ (76), ಹುಕ್ಕೇರಿ ತಾಲೂಕಿನ ಕರಕನಟ್ಟಿ ಗ್ರಾಮದ ನಿವಾಸಿ ಕಾರು ಚಾಲಕ ಪಂಚಾಕ್ಷರಿ ಹಿರೇಮಠ ಮೃತಪಟ್ಟವರು. ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದಿನ ಬಿಜೆಪಿ ಸರ್ಕಾರದ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ಆಯೋಜಿಸಿದ್ದವು. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾಡಸಿದ್ದೇಶ್ವರ ಸ್ವಾಮೀಜಿ ಕಾರಲ್ಲಿ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್ನ ಶವಾಗಾರಕ್ಕೆ ರವಾನಿಸಲಾಗಿದೆ.