ಹೊಸದಿಗಂತ ವರದಿ ಹುಬ್ಬಳ್ಳಿ:
ಚುನಾವಣಾ ಪೂರ್ವದಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್, ಅಧಿಕಾರ ಸಿಕ್ಕಬಳಿಕ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂಬ ಕುಂಟು ನೆಪ ಹೇಳುತ್ತಿದೆ. ಒಟ್ಟಾರೆ ಮತದಾನ ಮಾಡಿದ ಜನರಿಗೆ ಮೋಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರದಿಂದ ಅಕ್ಕಿ ಪಡೆಯುತ್ತೇವೆ ಎಂದು ಸ್ಪಷ್ಟ ಪಡಿಸಿರಲಿಲ್ಲ ಏಕೆ? ಈಗ ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು.
ಕಾಂಗ್ರೆಸ್ ನೀಡಿದ ಗ್ಯಾರಂಟಿ ಭರವಸೆಯಲ್ಲಿ ದಿನಕೊಂದು ಷರತ್ತು ವಿಧಿಸಿ ಮೋಸ ಮಾಡುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಯಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರದ ಸರ್ವರ್ ಹ್ಯಾಕ್ ಮಾಡಿದೆ ಎಂಬ ಸಚಿವರ ಹೇಳಿಕೆ ಹಾಸ್ಯಾಸ್ಪದ ಆಗಿದೆ. ಬೇಜವಾಬ್ದಾರಿ ಹೇಳಿಕೆ ನೀಡುವ ಮುನ್ನ ಸಚಿವರು ಯೋಚಿಸಬೇಕು ಎಂದರು.