ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ (Alok Mohan) ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ, ಟ್ರಾಫಿಕ್ ಸುಧಾರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಸೋಷಿಯಲ್ ಮೀಡಿಯಾ ವಿಂಗ್ ಸಿಬ್ಬಂದಿ ಸಂಖ್ಯೆಯಲ್ಲಿ ಹೆಚ್ಚಳ ಮಾಡಲು ಸೂಚನೆ ನೀಡಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರನ್ನು ಪತ್ತೆ ಹಚ್ಚಬೇಕು. ನಕಲಿ ಅಕೌಂಟ್ಗಳನ್ನು ತೆರೆದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಯತ್ನ ನಡೆಸಲಾಗುತ್ತಿದೆ. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ದೂರು ದಾಖಲಿಸಿಕೊಳ್ಳದಿದ್ದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಅಲೋಕ್ ಮೋಹನ್ ನೀಡಿದ್ದಾರೆ.
ಸದ್ಯ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಗಳೆಷ್ಟು? ಕೇಸ್ ದಾಖಲಾಗಿ ಚಾರ್ಜ್ಶೀಟ್ ಆಗದೇ ಪೆಂಡಿಂಗ್ ಇರುವ ಕೇಸ್ಗಳ ಸಂಖ್ಯೆ ಎಷ್ಟು? ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಸೈಬರ್ ಕ್ರೈಂ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಪತ್ತೆ ಹಚ್ಚಬೇಕು. ಈ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುವಂತಹ ಸೋಷಿಯಲ್ ಮೀಡಿಯಾ ಪೋಸ್ಟ್ಗಳ ಮೇಲೆ ನಿಗಾ ಇಡಲು ಅಲೋಕ್ ಮೋಹನ್ ಸೂಚಿಸಿದ್ದಾರೆ.
ಸಾರ್ವಜನಿಕರ ಜತೆ ಪೊಲೀಸರು ನಡವಳಿಕೆ ಉತ್ತಮವಾಗಿರಬೇಕು. ದೂರುಗಳು ಬಂದಾಗ ಕೂಡಲೇ ಪರಿಹರಿಸುವ ಕೆಲಸವಾಗಬೇಕು. ಈಗಾಗಲೇ ಎಲ್ಲಾ ಜಿಲ್ಲೆಗಳ ಎಸ್ಪಿಗಳಿಗೆ ನಿರ್ದೇಶನ ನೀಡಲಾಗಿದೆ. ಪೊಲೀಸ್ ಠಾಣೆಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಅಳವಡಿಸಲು ಸೂಚನೆ ನೀಡಲಾಗಿದೆ. ಕೆಲ ಠಾಣೆಗಳಲ್ಲಿ ಫೋನ್ ನಂಬರ್ ಹಾಕದಿರುವ ಬಗ್ಗೆ ದೂರುಗಳಿವೆ. ಫೋನ್ ನಂಬರ್ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.