ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮಾಜಿ ಸಂವಹನ ಉಸ್ತುವಾರಿ ವಿಜಯ್ ನಾಯರ್, ಅಭಿಷೇಕ್ ಬೋಯಿನ್ಪಲ್ಲಿ (ಹೈದರಾಬಾದ್ ಮೂಲದ ಉದ್ಯಮಿ) ಮತ್ತು ಬಿನೋಯ್ ಬಾಬು ಬಿನೋಯ್ (ಮದ್ಯ ಕಂಪನಿ ಪೆರ್ನೋಡ್ ರಿಕಾರ್ಡ್ ಮ್ಯಾನೇಜರ್) ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.
ಈ ಮುಂಚೆ ರಾಷ್ಟ್ರ ರಾಜಧಾನಿಯಲ್ಲಿ ಹಿಂದಿನ ಮದ್ಯ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪದ ಸಿಬಿಐ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು.
ಸಿಬಿಐ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನಿರಾಕರಿಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರ ಪೀಠ, ಮನೀಶ್ ಸಿಸೋಡಿಯಾ (ಅರ್ಜಿದಾರ) ಪ್ರಬಲ ವ್ಯಕ್ತಿಯಾಗಿರುವುದರಿಂದ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹೇಳಿದರು.
ಇಡಿ ದಾಖಲಿಸಿದ ಪ್ರಕರಣದಲ್ಲಿ ಅವರನ್ನು ಮಾರ್ಚ್ 9ರಂದು ಬಂಧಿಸಲಾಗಿದ್ದು, ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.